ಶ್ರೀಕಾಡಸಿದ್ದೇಶ್ವರ ಆಟೋ ಚಾಲಕರ ಹಾಗೂ ಮಾಲಕರ ಸಂಘ ತಮ್ಮ ಆಟೋಗಳನ್ನು ಬಂದು ಮಾಡಿ ಸತ್ಯಾಗ್ರಹದ ವೇದಿಕೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು
ಬನಹಟ್ಟಿ , ಆ. 13: ಪ್ರಜಾಸೌಧ ನಿರ್ಮಾಣದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರಜಾಸೌಧ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಬನಗಾರ ಸಮಾಜ ಹಾಗೂ ಆಟೋ ಚಾಲಕರ ಸಂಘ ಬೆಂಬಲ ವ್ಯಕ್ತಪಡಿಸಿವೆ.
ನಗರಕ್ಕೆ ನ್ಯಾಯದ ಹಕ್ಕುಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಗುರುವಾರವೂ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಬನಗಾರ ಸಮಾಜದ ಮುಖಂಡರು ಹಾಗೂ ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಹೋರಾಟದಲ್ಲಿ ಭಾಗವಹಿಸಿ, ಸರ್ಕಾರ ಕೂಡಲೇ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹೋರಾಟದ ಅಂಗವಾಗಿ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 7.30ರವರೆಗೆ ವಿವಿಧ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಮುಖಂಡರು ನೀಡಿದ್ದಾರೆ.
ಆಟೋ ಚಾಲಕರ ಸಂಘದ ಪ್ರತಿನಿಧಿಗಳು ಮಾತನಾಡಿ, ಸಮಾಜದ ನ್ಯಾಯಯುತ ಬೇಡಿಕೆಗಳಿಗೆ ತಮ್ಮ ಸಂಘ ಸಂಪೂರ್ಣ ಬೆಂಬಲ ನೀಡಲಿದೆ. ಸರ್ಕಾರ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.
ಹೋರಾಟದಲ್ಲಿ ಬನಗಾರ ಸಮಾಜದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಆಟೋ ಚಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ : ಕಲಾಂ ಎಕ್ಸ್ ಪ್ರೆಸ್ ನ್ಯೂಸ್ ರಬಕವಿ ಬನಹಟ್ಟಿ

