


ಬನಹಟ್ಟಿಯಲ್ಲಿ ಉದ್ವಿಗ್ನ : 133ನೇ ಕಲಂ ಜಾರಿಪ್ರಜಾಸೌಧಕ್ಕಾಗಿ ಹೋರಾಟ 37ನೇ ದಿನಕ್ಕೆ; ಏಳು ಉಪವಾಸ ಸತ್ಯಾಗ್ರಹಿಗಳು ಆಸ್ಪತ್ರೆಗೆ

ಬನಹಟ್ಟಿ: ರಬಕವಿ–ಬನಹಟ್ಟಿ ಅವಳಿ ನಗರದ ಪ್ರಜಾಸೌಧವನ್ನು ಬನಹಟ್ಟಿಯಲ್ಲೇ ನಿರ್ಮಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ಮಂಗಳವಾರ 37ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟದ ಅಂಗವಾಗಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ 6ನೇ ದಿನಕ್ಕೆ ಮುಂದುವರಿದಿದ್ದು, ಪ್ರತಿಭಟನಾ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡರು.
ನಿರಂತರ ಉಪವಾಸದಿಂದ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಏಳು ಮಂದಿ ಉಪವಾಸ ಸತ್ಯಾಗ್ರಹಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಉಪವಾಸ ಸತ್ಯಾಗ್ರಹಿಗಳ ಆರೋಗ್ಯದ ಹಿತದೃಷ್ಟಿಯಿಂದ ವೈದ್ಯರ ಸಲಹೆಯಂತೆ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ ತಿಳಿಸಿದರು.
ಪ್ರಜಾಸೌಧ ಬನಹಟ್ಟಿಯಲ್ಲೇ ನಿರ್ಮಾಣವಾಗಬೇಕು ಎಂಬ ಬೇಡಿಕೆಗೆ ಬೆಂಬಲ ಸೂಚಿಸಿ ನಗರದ ಪ್ರಮುಖ ರಸ್ತೆಗಳು ಬಂದ್ ಆಗಿದ್ದವು. ನಗರದ ಅಂಗಡಿ–ಮುಂಗಟ್ಟುಗಳನ್ನು ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಹೋರಾಟದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.

